ಬೆಂಗಳೂರಿನಲ್ಲಿ 24/7 ಹೋಟೆಲ್, ರೆಸ್ಟೋರೆಂಟ್ ತೆರೆಯಲು ಮನವಿ! ಬೇಡಿಕೆಗೆ ಸಿಎಂ ಸ್ಪಂದನೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದ 24 ಗಂಟೆಯೂ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳನ್ನು ತೆರೆಯಲು ಅನುಮತಿ ನೀಡುವಂತೆ ಬೆಂಗಳೂರು ಹೋಟೆಲ್‌ಗಳ ಸಂಘ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ದೇಶದ ಇತರೆ ಮೆಟ್ರೋ ನಗರಗಳ ಮಾದರಿಯಲ್ಲಿ ಬೆಂಗಳೂರಿನಲ್ಲೂ 24/7 ಹೋಟೆಲ್ ಸೇವೆಗೆ ಅವಕಾಶ ಕಲ್ಪಿಸಬೇಕೆಂದು ಸಂಘ ಒತ್ತಾಯಿಸಿದೆ.

ಬೆಂಗಳೂರು ಮಹಾನಗರವಾಗಿ ಬೆಳೆಯುತ್ತಿದ್ದರೂ ಅದಕ್ಕೆ ತಕ್ಕ ಸೌಲಭ್ಯಗಳು ಇನ್ನೂ ಲಭ್ಯವಾಗಿಲ್ಲ ಎಂದು ಸಂಘ ಅಸಮಾಧಾನ ವ್ಯಕ್ತಪಡಿಸಿದೆ. ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ಕೇರಳ ಮತ್ತು ಗೋವಾ ರಾಜ್ಯಗಳಲ್ಲಿ ಈಗಾಗಲೇ 24 ಗಂಟೆಯೂ ಹೋಟೆಲ್‌ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಇದೇ ಮಾದರಿಯನ್ನು ಬೆಂಗಳೂರಿನಲ್ಲೂ ಜಾರಿಗೆ ತರಬೇಕು ಎಂದು ಸರ್ಕಾರದ ಗಮನ ಸೆಳೆದಿದೆ.

ಹೋಟೆಲ್ ಉದ್ಯಮದ ಬಹುಕಾಲದ ಬೇಡಿಕೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಂದಿಸಿದ್ದಾರೆ. ಸಂಘದ ಮನವಿಯನ್ನು ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಶಿಫಾರಸು ಮಾಡಿದ್ದಾರೆ.

ಮಾಲ್, ಮಲ್ಟಿಪ್ಲೆಕ್ಸ್, ಹೋಟೆಲ್, ರೆಸ್ಟೋರೆಂಟ್ ಹಾಗೂ ಅಂಗಡಿಗಳನ್ನು ಹೆಚ್ಚು ಸಮಯ ತೆರೆದಿಡುವಂತೆ ಪ್ರಧಾನಮಂತ್ರಿಯವರು ನೀಡಿರುವ ಸಲಹೆಯನ್ನೂ ಸಂಘ ಉಲ್ಲೇಖಿಸಿದೆ.

ರಾತ್ರಿ ವ್ಯಾಪಾರಕ್ಕೆ ಅವಕಾಶ ನೀಡುವುದರಿಂದ ಹಗಲಿನ ವಾಹನ ದಟ್ಟಣೆ ಕಡಿಮೆಯಾಗಲಿದೆ. ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೂ ಅನುಕೂಲವಾಗಲಿದೆ ಎಂಬುದು ಸಂಘದ ಅಭಿಪ್ರಾಯವಾಗಿದೆ. ಈ ಮನವಿಗೆ ಸಾರ್ವಜನಿಕರಿಂದಲೂ ಬೆಂಬಲ ವ್ಯಕ್ತವಾಗಿದೆ.