ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಬಿಜೆಪಿ ಶಾಸಕ ಸಿ.ಟಿ. ರವಿ ಆಗ್ರಹ

ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದ ಎಂಟು ದಿನಗಳಿಂದ ಧರಣಿ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ವಿಧಾನ ಪರಿಷತ್ ಸದಸ್ಯ ಡಾ. ಸಿ.ಟಿ. ರವಿ ಅವರು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.

ರಾಜ್ಯದ ಆರೋಗ್ಯ ಸೇವಾ ವ್ಯವಸ್ಥೆಯಲ್ಲಿ ಆಶಾ ಕಾರ್ಯಕರ್ತೆಯರು ಮಹತ್ವದ ಪಾತ್ರ ವಹಿಸುತ್ತಿದ್ದು, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಆರೋಗ್ಯ ಸೇವೆ ತಲುಪಿಸುವುದು, ತಾಯಿ-ಮಗುವಿನ ಆರೋಗ್ಯ ಕಾಳಜಿ, ಲಸಿಕಾ ಕಾರ್ಯಕ್ರಮ ಹಾಗೂ ಸಾರ್ವಜನಿಕ ಆರೋಗ್ಯ ಜಾಗೃತಿಯಲ್ಲಿ ಅವರ ಕೊಡುಗೆ ಅಪಾರವಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಎಂಟು ದಿನಗಳಿಂದ ಧರಣಿ ನಡೆಸುತ್ತಿದ್ದರೂ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದಿರುವುದು ವಿಷಾದನೀಯ. ಜನರ ಆರೋಗ್ಯ ಸೇವೆಯಲ್ಲಿ ತೊಡಗಿರುವ ಕಾರ್ಯಕರ್ತೆಯರು ತಮ್ಮ ಬದುಕಿನ ಅನಿವಾರ್ಯತೆಗಳಿಗಾಗಿ ಬೀದಿಗಿಳಿದು ಹೋರಾಡುವ ಪರಿಸ್ಥಿತಿ ನಿರ್ಮಾಣವಾಗಿರುವುದು ಕಳವಳಕಾರಿ ಎಂದು ಹೇಳಿದ್ದಾರೆ.

ಧರಣಿಯಿಂದ ಕಾರ್ಯಕರ್ತೆಯರ ಕುಟುಂಬಗಳ ಮೇಲೆ ಉಂಟಾಗುತ್ತಿರುವ ಆರ್ಥಿಕ ಮತ್ತು ಮಾನಸಿಕ ಒತ್ತಡ ಹಾಗೂ ಸಾರ್ವಜನಿಕ ಆರೋಗ್ಯ ಸೇವೆಗಳ ಮೇಲಿನ ಪರಿಣಾಮವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣ ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಮಧ್ಯಪ್ರವೇಶಿಸಿ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು. ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಕಾಲಮಿತಿಯೊಳಗೆ ಈಡೇರಿಸಿ, ಅವರಿಗೆ ನ್ಯಾಯಯುತ ಗೌರವ ಮತ್ತು ಸೌಲಭ್ಯಗಳನ್ನು ಒದಗಿಸುವ ಮೂಲಕ ಧರಣಿಯನ್ನು ಗೌರವಯುತವಾಗಿ ಅಂತ್ಯಗೊಳಿಸಲು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸಬೇಕು ಎಂದು ಡಾ. ಸಿ.ಟಿ. ರವಿ ಮನವಿ ಮಾಡಿದ್ದಾರೆ.