ಬೆಂಗಳೂರು ಸಹಿತ ರಾಜ್ಯದ ಹಲವು ಜಿಲ್ಲೆಗಳಲ್ಲಿ ಐದು ದಿನ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಐದು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲೂ ಮಳೆಯಾಗುವ ನಿರೀಕ್ಷೆಯಿದೆ.

ಮಂಗಳವಾರ ಸಂಜೆ 5.30ರವರೆಗೆ ಬೆಂಗಳೂರು ನಗರದಲ್ಲಿ 4.1 ಮಿ.ಮೀ., ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ 15.8 ಮಿ.ಮೀ. ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.6 ಮಿ.ಮೀ. ಮಳೆ ದಾಖಲಾಗಿದೆ.

ಬಂಗಾಳ ಕೊಲ್ಲಿ, ಉತ್ತರ ಮಹಾರಾಷ್ಟ್ರ ಮತ್ತು ದಕ್ಷಿಣ ಕೇರಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಗ್ಗು ಪ್ರದೇಶ ಹಾಗೂ ಮೇಲ್ಮೈ ಸುಳಿಗಾಳಿ ವ್ಯವಸ್ಥೆಗಳು ಸಕ್ರಿಯವಾಗಿವೆ.

ಇದರ ಪ್ರಭಾವದಿಂದ ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.