ಬೆಂಗಳೂರುಜ.2-ರಾಜ್ಯದಲ್ಲಿ ಸಾರಿಗೆ ಸಂಸ್ಥೆ ಪ್ರಯಾಣಿಕರಿಗೆ ಹೊಸ ವರ್ಷಕ್ಕೆ ಶಾಕ್ ನೀಡಿದ್ದು ನಾಲ್ಕು ಸಾರಿಗೆ ನಿಗಮಗಳ ಪ್ರಯಾಣ ದರವನ್ನು ಶೇ.15 ರಷ್ಟು ಹೆಚ್ಚಳ ಮಾಡಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಎಚ್.ಕೆ .ಪಾಟೀಲ್ ಸುದ್ದಿಗಾರರಿಗೆ ಮಾಹಿತಿ ನೀಡಿ, ಪರಿಷ್ಕೃತ ದರಗಳು ಜನವರಿ 5 ರಿಂದ ಜಾರಿಗೆ ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಲ್ಲಿ ಪ್ರಯಾಣ ದರ ಪರಿಷ್ಕರಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಶೇ.15ರಷ್ಟು ದರ ಪರಿಷ್ಕರಣೆ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.
ಈ ಮೊದಲು 2015ರಲ್ಲಿ ದರ ಪರಿಷ್ಕರಣೆಯಾಗಿತ್ತು. ನಾಲ್ಕು ರಸ್ತೆ ಸಾರಿಗೆ ನಿಗಮಗಳ ಡೀಸೆಲ್ ವೆಚ್ಚ 2015ರಲ್ಲಿ ನಿತ್ಯ 9.14 ಕೋಟಿ ರೂ. ಇತ್ತು, ಈಗ ಅದು 13.21 ಕೋಟಿ ರೂ.ಗೆ ಹೆಚ್ಚಳವಾಗಿದೆ. ಸಿಬ್ಬಂದಿ ವೆಚ್ಚವೂ ನಿತ್ಯ 12.85 ಕೋಟಿಯಿಂದ ಪ್ರಸ್ತುತ 18.36 ಕೋಟಿ ರೂ.ಗೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ದರ ಪರಿಷ್ಕರಣೆ ಮಾಡಲು ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದರು.
ರಸ್ತೆ ಸಾರಿಗೆ ನಿಗಮಗಳಿಗೆ ನಿತ್ಯ 9.56 ಕೋಟಿ ಹೆಚ್ಚುವರಿ ಹೊರೆ ಬೀಳುತ್ತಿದೆ. ಅದನ್ನು ಸರಿದೂಗಿಸಲು ದರ ಪರಿಷ್ಕರಣೆ ಮಾಡಲಾಗುತ್ತಿದೆ. ಪರಿಷ್ಕರಣೆ ಮಾಡುವುದರಿಂದ ಪ್ರತಿ ತಿಂಗಳು 74.85 ಕೋಟಿ ರೂ. ಆದಾಯ ಹೆಚ್ಚಾಗಲಿದೆ. ಶಕ್ತಿ ಯೋಜನೆಗೆ 5,015 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದೆ. ಶಕ್ತಿ ಯೋಜನೆಗೆ ಪ್ರತಿ ತಿಂಗಳು 417.92 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಶಕ್ತಿ ಯೋಜನೆಯಿಂದ ರಾಜ್ಯದ ಬೊಕ್ಕಸಕ್ಕೆ ಹೆಚ್ಚುವರಿ ಹೊರೆ ಆಗುವುದಿಲ್ಲ ಎಂದು ಹೆಚ್.ಕೆ.ಪಾಟೀಲ್ ಹೇಳಿದರು.
ಸಚಿವ ಸಂಪುಟ ಸಭೆಯಲ್ಲಿ ನಾಲ್ಕು ಸಾರಿಗೆ ಸಂಸ್ಥೆಗಳಿಗೆ ಭವಿಷ್ಯ ನಿಧಿ ಬಾಕಿ ಹಾಗೂ ಇಂಧನ ಬಾಕಿ ಹೊಣೆಗಾರಿಕೆ ಪಾವತಿಸಲು ಒಟ್ಟು 2000 ಕೋಟಿ ರೂ.ಗಳನ್ನು ಸರ್ಕಾರದ ಖಾತರಿ/ಗ್ಯಾರಂಟಿಯೊಂದಿಗೆ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಲು 31.12.2024 ರಂದು ಹೊರಡಿಸಿರುವ ಸರ್ಕಾರಿ ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲಾಯಿತು.
ಸಾರಿಗೆ ಬಸ್ ದರ ಮಾಡುವುದಿಲ್ಲ ಎಂದು ಹೇಳುತ್ತಿದ್ದ ಸರ್ಕಾರ ಈಗ. ದರ ಹೆಚ್ಚಳ ಮಾಡಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ
Log in to write reviews