ಕೊರಟಗೆರೆ: ಸಾರ್ವಜನಿಕರು ತಮ್ಮ ಸಣ್ಣಪುಟ್ಟ ಕೆಲಸಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಪದೇಪದೆ ಅಲೆದಾಡುವುದನ್ನು ತಪ್ಪಿಸಿ, ಆಡಳಿತ ವ್ಯವಸ್ಥೆಯನ್ನೇ ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಪ್ರಜಾಸೇವೆ’ ಅಭಿಯಾನ ಆರಂಭಿಸಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದರು.
ತುಮಕೂರು ಜಿಲ್ಲೆಯ ಕೊರಟಗೆರೆ ಪಟ್ಟಣದಲ್ಲಿ ಆಯೋಜಿಸಿದ್ದ ಪ್ರಜಾಸೇವೆ ಅಭಿಯಾನ ಉದ್ಘಾಟಿಸಿ ಮಾತನಾಡಿದ ಅವರು, ಈ ಅಭಿಯಾನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೃದಯಕ್ಕೆ ಹತ್ತಿರವಾದ ಕಾರ್ಯಕ್ರಮವಾಗಿದ್ದು, ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದರು.
ಅಭಿಯಾನದಲ್ಲಿ ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಸಲ್ಲಿಸಬಹುದು. ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಿ, ಸಾಧ್ಯವಾದಷ್ಟು ಅರ್ಜಿಗಳನ್ನು ಅಂದೇ ಸಂಜೆ ವೇಳೆಗೆ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಿದ್ದಾರೆ. ಸಲ್ಲಿಕೆಯಾಗುವ ಅರ್ಜಿಗಳ ಪೈಕಿ ಕನಿಷ್ಠ ಶೇ.50ರಷ್ಟು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಗುರಿಯಿದೆ. ತುಮಕೂರು ಜಿಲ್ಲೆಯ ತಿಪಟೂರು, ಗುಬ್ಬಿ ಮತ್ತು ಕುಣಿಗಲ್ನಲ್ಲಿ ಈಗಾಗಲೇ ಕಾರ್ಯಕ್ರಮ ನಡೆದಿದ್ದು, ಇದೀಗ ಕೊರಟಗೆರೆಯಲ್ಲಿ ಆಯೋಜಿಸಲಾಗಿದೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ಅಭಿಯಾನ ನಡೆಯುತ್ತಿದೆ ಎಂದು ಹೇಳಿದರು.

ಚುನಾವಣೆಗೆ ಮುನ್ನ ಘೋಷಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಎಲ್ಲ ಟೀಕೆಗಳ ನಡುವೆಯೂ ಜಾರಿಗೊಳಿಸಲಾಗಿದೆ. ಈವರೆಗೆ ಗ್ಯಾರಂಟಿ ಯೋಜನೆಗಳಿಗೆ ಒಟ್ಟು ₹1.62 ಲಕ್ಷ ಕೋಟಿ ವೆಚ್ಚ ಮಾಡಲಾಗಿದೆ. ಪ್ರತಿವರ್ಷ ಸುಮಾರು ₹50 ಸಾವಿರ ಕೋಟಿ ಖರ್ಚು ಮಾಡಲಾಗುತ್ತಿದೆ. ಜಾತಿ, ಧರ್ಮ ಮತ್ತು ಪಕ್ಷಭೇದವಿಲ್ಲದೆ ಅರ್ಹ ಎಲ್ಲರಿಗೂ ಯೋಜನೆಗಳ ಪ್ರಯೋಜನ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.
ಅನ್ನಭಾಗ್ಯ ಯೋಜನೆಯಿಂದ ಬಡವರ ಹಸಿವು ನೀಗಿಸುವ ಪ್ರಯತ್ನ ಮಾಡಲಾಗಿದೆ. ಗೃಹಲಕ್ಷ್ಮೀ ಯೋಜನೆಯಡಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ₹2,000 ನೀಡಲಾಗುತ್ತಿದ್ದು, ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಇದು ನೆರವಾಗಿದೆ. ಶಕ್ತಿ ಯೋಜನೆಯಿಂದಲೂ ಮಹಿಳೆಯರಿಗೆ ಹೆಚ್ಚಿನ ಅನುಕೂಲವಾಗಿದೆ. ಈ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಂದುವರಿಸಲಿದ್ದಾರೆ ಎಂದು ಹೇಳಿದರು.
